ನವದೆಹಲಿ: ಹೂಡಿಕೆ, ವ್ಯಾಪಾರ, ಮಾಹಿತಿ ತಂತ್ರಜ್ಞಾನ, ಸೈಬರ್ ಭದ್ರತೆ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ 15 ಒಪ್ಪಂದಗಳಿಗೆ ಭಾರತ ಮತ್ತು ಬ್ರೆಜಿಲ್ ಶನಿವಾರ ಸಹಿ ಹಾಕಿವೆ. ಭಾರತ ಪ್ರವಾಸದಲ್ಲಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಜತೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಬಳಿಕ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಬಳಿಕ ಮಾತನಾಡಿದ ಮೋದಿ, ಉಭಯ ರಾಷ್ಟ್ರಗಳ ನಡುವಣ ಬಾಂಧವ್ಯ ವೃದ್ಧಿ ನಿಟ್ಟಿನಲ್ಲಿ ಕ್ರಿಯಾಯೋಜನೆ ಅಂತಿಮಗೊಳಿಸಲಾಗಿದೆ ಎಂದು ಹೇಳಿದರು.